
ಹಾವೇರಿ: ರಾಜ್ಯದಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತ ಪ್ರಕರಣ. ಇಂದು ಬೆಳ್ಳಂಬೆಳಗ್ಗೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು 13 ಮಂದಿ ಮೃತಪಟ್ಟಿದ್ದಾರೆ.
ನಿಂತಿದ್ದ ಲಾರಿಗೆ ಗುದ್ದಿದ ಪರಿಣಾಮ ಟಿಟಿ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ವಾಹನದಲ್ಲಿ ಮೃತದೇಹಗಳು ಅಪ್ಪಚ್ಚಿಯಾಗಿವೆ
ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಅಪಘಾತ ನಡೆದಿದೆ ಎನ್ನಲಾಗಿದೆ. ಘಟನೆ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಇಲಾಖೆ ಸಿಬ್ಬಂದಿ ವಾಹನದಲ್ಲಿ ಸಿಲುಕಿದ್ದ ಮೃತದೇಹಗಳನ್ನ ಹೊರ ತೆಗೆಯಲು ಹರಸಾಹಸ ಪಟ್ಟಿದ್ದಾರೆ. ಘಟನೆಯಲ್ಲಿ ಓರ್ವ ಅಪ್ರಾಪ್ತರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಮೃತರ ಹಿನ್ನೆಲೆಗಳನ್ನು ಕಲೆ ಹಾಕುತ್ತಿದ್ದಾರೆ.
ಇನ್ನು ಅಪಘಾತದಲ್ಲಿ ಮೃತಪಟ್ಟವರ ವಿವರಗಳು.
ಪರಶುರಾಮ್ (45 ), ಭಾಗ್ಯ (40) , ನಾಗೇಶ್ (50), ವಿಶಾಲಾಕ್ಷಿ(50), ಸುಭದ್ರಾ ಭಾಯಿ(65), 6) ಪುಣ್ಯ(50), ಮಂಜುಳಾ ಭಾಯಿ( 57), ಆದರ್ಶ್ (23) ಡ್ರೈವರ್, ಮಾನಸಾ(24), ರೂಪಾ(40), ಮಂಜುಳಾ(50), 12 ವರ್ಷದ ಮಗು ಹೆಸರು ಪತ್ತೆಯಾಗಬೇಕಿದೆ), (6 ವರ್ಷದ ಮಗು ಹೆಸರು ಪತ್ತೆ ಆಗಬೇಕಿದೆ)
ಮೃತಪಟ್ಟ ಎಲ್ಲರೂ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆ ಹೊನ್ನೂರು ಬಳಿಯ ಎಮ್ಮಿಹಟ್ಟಿ ಗ್ರಾಮದವರು ಎಂದು ತಿಳಿದು ಬಂದಿದೆ. ಕಲಬುರಗಿ ಜಿಲ್ಲೆಯ ಚಿಂಚೊಳ್ಳಿ ಮಾಯಮ್ಮನ ದರ್ಶನ ಮಾಡಿಕೊಂದು ಸ್ವಗ್ರಾಮಕ್ಕೆ ವಾಪಾಸಾಗುವಾಗ ಈ ದುರ್ಘಟನೆ ಸಂಭವಿಸಿದೆ. ಟಿಟಿಯಲ್ಲಿ ಒಟ್ಟು 17 ಜನ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. 4 ಮಂದಿ ಗಾಯಾಳುಗಳಿಗೆ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.