
ಹಾಸನ: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ವರುಣಾರ್ಭಟ ಮುಂದುವರಿದಿದ್ದು ಶಿರಾಡಿ ಘಾಟ್ನಲ್ಲಿ ಭಾರೀ ಭೂಕುಸಿತವಾಗಿ ಮಣ್ಣಿನ ಅಡಿಯಲ್ಲಿ ಹಲವು ವಾಹನಗಳು ಸಿಲುಕಿದೆ ಎಂದು
ಹೇಳಲಾಗುತ್ತಿದೆ ಎರಡು ಕಾರು, ಒಂದು ಟ್ಯಾಂಕರ್ ಸೇರಿ ಆರು ವಾಹನಗಳು ಮಣ್ಣನಡಿ ಸಿಲುಕಿವೆ ಎನ್ನಲಾಗಿದೆ.
ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದ ಕಳೆದ ಕೆಲವು ದಿನಗಳ ಹಿಂದೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯ ದೊಡ್ಡತಪ್ಲೆ ಬಳಿ ಭೂಕುಸಿತವಾಗಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಂಪೂರ್ಣ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಇದೀಗ ಮತ್ತೆ ಅದೇ ಜಾಗದಲ್ಲಿ ಭೂಕುಸಿತ ಸಂಭವಿಸಿದೆ. ಹಲವು ವಾಹನಗಳು ಮಣ್ಣಿನಡಿ ಸಿಲುಕಿವೆ.
ಜುಲೈ 18ರಂದು ಶಿರಾಡಿ ಘಾಟಿ ರಸ್ತೆಯ ದೊಡ್ಡತಪ್ಲೆ ಬಳಿ ಭೂಕುಸಿತ ಸಂಭವಿಸಿತ್ತು. ಅದೃಷ್ಟವಶಾತ್ ಯಾವುದೇ ರೀತಿಯ ಹಾನಿ ಸಂಭವಿಸಿರಲಿಲ್ಲ. ನಂತರ ವಾಹನ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಜುಲೈ 20ರಿಂದ ಹಗಲು ಸಂಚಾರಕ್ಕೆ ಮಾತ್ರ (ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ) ಅನುಮತಿ ನೀಡಲಾಗಿತ್ತು.
ಆದರೆ ಇಂದು ಭಾರಿ ಪ್ರಮಾಣದಲ್ಲಿ ಮುನ್ನು ಕುಸಿಯುತ್ತಿರುವುದರಿಂದ ಸಂಪೂರ್ಣವಾಗಿ ವಾಹನ ಸಂಚಾರ ಬಂದ್ ಮಾಡಲಾಗಿದೆ ಇನ್ನು ಮಂಗಳೂರು ಹಾಗೂ ದಕ್ಷಿಣ ಕನ್ನಡ ಭಾಗದಿಂದ ಬರುತ್ತಿರುವ ವಾಹನಗಳನ್ನು ಪೊಲೀಸರು ತಡೆದು ವಾಪಸ್ ಕಳಿಸುವ ಕೆಲಸ ಮಾಡುತ್ತಿದ್ದಾರೆ.
ಯಾವುದೇ ಅಪಾಯ ಸಂಭವಿಸದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.
ಹಾಸನ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಕಳೆದ 15 ದಿನಗಳಿಂದ ಈ ಪ್ರದೇಶದಲ್ಲಿ ಮಣ್ಣು ಕುಸಿಯುತ್ತಿದೆ. ಇಂದು ಮತ್ತೆ ಮಣ್ಣು ಕುಸಿದಿದೆ ಇದೇ ವೇಳೆ ಕಾರಿನಲ್ಲಿ ಸಂಚರಿಸುತ್ತಿದ್ದವರು ಅದರಡಿ ಸಿಲುಕಿದ್ದಾರೆ.
ಸದ್ಯ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ರಕ್ಷಣಾ ಸಿಬ್ಬಂದಿ ಜೆಸಿಬಿ ಮೂಲಕ ಮಣ್ಣು ತೆರವು ಮಾಡುತ್ತಿದ್ದಾರೆ. ಈ ಘಟನೆಯ ನಂತರ ಸ್ಥಳದಲ್ಲಿ ಆತಂಕ ಹೆಚ್ಚಾಗಿದೆ.
ಮತ್ತಷ್ಟು ಮಣ್ಣು ಕುಸಿದರೆ ದೊಡ್ಡ ಅನಾಹುತವೇ ಸಂಭವಿಸುವ ಭೀತಿ ಎದುರಾಗಿದೆ. ಸಮರೋಪಾದಿಯಲ್ಲಿ ಮಣ್ಣು ತೆರವು ಮಾಡಲು ಪ್ರಯತ್ನಿಸಲಾಗುತ್ತಿದೆ.
ಮೊನ್ನೆ ಶನಿವಾರ ಎತ್ತಿನಹಳ್ಳದ ಬಳಿ ಮಳೆಯಿಂದ ಗುಡ್ಡ ಕುಸಿದಿದ್ದು, ಮತ್ತೆ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚಾರ ಬಂದ್ ಮಾಡಲಾಗಿತ್ತು. ನಂತರ ಮಣ್ಣು ತೆರವು ಮಾಡಿ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ಇದೀಗ ಮತ್ತೆ ಬಾರಿ ಪ್ರಮಾಣದಲ್ಲಿ ಭೂಕುಸಿತ ಸಂಭವಿಸಿದ್ದು, ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ಇನ್ನು ದಕ್ಷಿಣ ಕನ್ನಡ, ಹಾಸನ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.