
ಉಡುಪಿ : ರಾಜ್ಯದ ಕರಾವಳಿ ಜಿಲ್ಲೆ ಸೇರಿ ಕೊಡಗು ಚಿಕ್ಕಮಂಗಳೂರು ಶಿವಮೊಗ್ಗ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆ ಆಗುತ್ತಿದ್ದು ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ ಶನಿವಾರ ರಾತ್ರಿಯಿಂದ ಸುರಿದ ಭಾರಿ ಮಳೆಗೆ ಉಡುಪಿ ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ.
ಕರಾವಳಿ ಜಿಲ್ಲೆಯಾದ ಉಡುಪಿ ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ 48 ಗಂಟೆ ಗಾಳಿ ಸಹಿತ ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು.16ರಂದು ರಜೆ ಘೋಷಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ , ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಅವರು ಆದೇಶ ಹೊರಡಿಸಿದ್ದಾರೆ.
ಇನ್ನು ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರೆದಿರುವ ಹಿನ್ನೆಲೆ ನಾಳೆ (ಜುಲೈ 16) ಅಂಗನವಾಡಿ, ಶಾಲಾ- ಕಾಲೇಜುಗಳಿಗೆ ರಜೆ ಎಂದು ಅಧಿಕಾರಿಗಳು ಪ್ರಕಟಿಸಿದ್ದಾರೆ. ಕೊಡಗು ಜೆಲ್ಲೆಯಲ್ಲಿ ಪದವಿ ಕಾಲೇಜು ಸೇರಿ ಎಲ್ಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಯತ್ರ ಸ್ಥಳ ಕುಕ್ಕೆ ಸುಬ್ರಮಣ್ಯದ ಕುಮಾರಧಾರ ನದಿ ಉಕ್ಕಿ ಹರಿಯುತ್ತಿದ್ದು ಸ್ನಾನಘಾಟ್ ಮುಳುಗಡೆ ಆಗಿದ್ದು ಭಕ್ತರಿಗೆ ನದಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ ನದಿ ನೀರಿನ ಮಟ್ಟ ಏರುಗತಿಯಲ್ಲಿದೆ. ಚಾರ್ಮಾಡಿ, ಆಗುಂಬೆ ಸೇರಿದಂತೆ ಘಾಟ್ ಮೂಲದಲ್ಲಿ ಉತ್ತಮ ಮಳೆಯಾಗಿರುವುದು ಮಾತ್ರವಲ್ಲದೆ ನದಿ ನೀರಿನ ಹರಿಯುವಿಕೆಯಲ್ಲೂ ಹೆಚ್ಚಳವಾಗಿದೆ.
ಇನ್ನು ಉಡುಪಿ ಜಿಲ್ಲೆಯ ಬೈಂದೂರು ಕುಂದಾಪುರ ತಾಲೂಕಿನ ಕೆಲವು ತಗ್ಗು ಪ್ರದೇಶಗಳಿಗೆ ನೆರೆ ನೀರು ನುಗ್ಗಿ ಆತಂಕದ ಸ್ಥಿತಿ ನಿರ್ಮಾಣವಾಗಿದೆ.
ಇನ್ನು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂಗಾರು ಆರ್ಭಟ ಜೋರಾಗಿದ್ದು ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಮುಂದಿನ ಆರು ದಿನ ರಾಜ್ಯದಲ್ಲಿ ಮುಂಗಾರು ಆರ್ಭಟ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.